ಬಿಎಸ್ ವೈಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ
ಯುಗಾದಿಯ ಬಂಪರ್ ಕೊಡುಗೆ ಎಂಬಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜ್ಯ ಬಿಜೆಪಿ ರಾಜಾಧ್ಯಕ್ಷರನ್ನಾಗಿ ಬಿಜೆಪಿ ಹೈಕಮಾಂಡ್ ಶುಕ್ರವಾರ ಅಧಿಕೃತವಾಗಿ ಘೋಷಿಸಿದೆ. ಕರ್ನಾಟಕ ಸೇರಿದಂತೆ 5 ರಾಜ್ಯಗಳ ಬಿಜೆಪಿ ಘಟಕಕ್ಕೆ ನೂತನ ಅಧ್ಯಕ್ಷರ ಹೆಸರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಅರುಣ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದರು. ಹಾಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರು, ಶಿವಮೊಗ್ಗ ಕ್ಷೇತ್ರದ ಸಂಸದರಾಗಿರುವ ಬಿಎಸ್ ವೈಗೆ 4ನೇ ಬಾರಿ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಒಲಿದಂತಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಪ್ರಹ್ಲಾದ್ ಜೋಶಿ ಅವರ ಅಧಿಕಾರಾವಧಿ ಮಾರ್ಚ್ ತಿಂಗಳಿಗೆ ಕೊನೆಗೊಂಡಿತ್ತು. ತನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮನೆಗೆ ತೆರಳಿ ಧನ್ಯವಾದ ಅರ್ಪಿಸಿದ್ದಾರೆ. ಎಲ್ಲರನ್ನೂ ಒಂದುಗೂಡಿಸಿ ಪಕ್ಷವನ್ನು ಬಲಪಡಿಸಿ, ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಬಿಎಸ್ ವೈ ನವದೆಹಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದಾರೆ.