UK Suddi
The news is by your side.

ಏನಿದು ಕಳಸಾ ಬಂಡೂರಿ ಯೋಜನೆ? : ಮಾಹಿತಿ ಇಲ್ಲಿದೆ

image

ಗದಗ್, ಧಾರವಾಡ, ಬೆಳಗಾವಿ ಜನರ ನೀರಿನ ಸಮಸ್ಯೆ ಪರಿಹಾರಿಸಲು ಸರ್ಕಾರ ಕಳಸಾ ಹಾಗೂ ಬಂಡೂರಿ ಎಂಬ ಎರಡು ಹೊಸ ಯೋಜನೆಗಳನ್ನು ಆರಂಭಿಸಲು ಮುಂದಾಯಿತು. ಇದಕ್ಕಾಗಿ ಕಳಸಾ ಯೋಜನೆಯಲ್ಲಿ ಮೊದಲು ಕಳಸಾ ನದಿಗೆ ಅಣೆಕಟ್ಟು ಹಾಗೂ 4.8 ಕಿ.ಮಿ. ಉದ್ದದ ಕಾಲುವೆ ನಿರ್ಮಾಣ ಮಾಡುವುದು, ಇನ್ನೊಂದು ಹಳತಾರಾ ನದಿಗೆ ಅಣೆಕಟ್ಟು ನಿರ್ಮಿಸಿ ಅಲ್ಲಿ ಸಂಗ್ರಹವಾದ ನೀರನ್ನು 5.5 ಕಿ.ಮೀ. ಉದ್ದದ ಕಾಲುವೆಯ ಮೂಲಕ ಕಳಸಾ ಅಣೆಕಟ್ಟೆಗೆ ಸಾಗಿಸುವ ಉದ್ದೇಶದೊಂದಿಗೆ ಈ ಕಾಮಗಾರಿ ಆರಂಭವಾಯಿತು. ಬಂಡೂರಿ ಯೋಜನೆಯಲ್ಲಿ ಸಿಂಗಾರ ನಾಲಾ ಹಾಗೂ ವಾಟಿ ನಾಲಾಗಳಿಗೆ ಅಣೆಕಟ್ಟು ಕಟ್ಟಿ ಸಂಗ್ರಹವಾದ ನೀರನ್ನು ಬಂಡೂರಿ ಜಲಾಶಯಕ್ಕೆ ವರ್ಗಾಯಿಸುವುದು. ಇಲ್ಲಿ ಸಂಗ್ರಹವಾದ 4 ಟಿಎಂಸಿ ನೀರನ್ನು 5.15 ಕಿ.ಮೀ ಕಾಲುವೆ ಮೂಲಕ ಮಲಪ್ರಭಾ ನದಿಗೆ ವರ್ಗಾಯಿಸುವ ಯೋಜನೆಯನ್ನು ಸರ್ಕಾರ ರೂಪಿಸಿತು.

ಯೋಜನೆ ಆರಂಭಗೊಂಡು ಅರ್ಧದಲ್ಲಿ ನಿಂತ ಕಥೆ:
ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಕುಡಿಯುವ ನೀರಿಗಾಗಿ ಬಳಸಿಕೊಳ್ಳುವ ಚಿಂತನೆ ಆರಂಭವಾದ ಹಿನ್ನೆಲೆಯಲ್ಲಿ 1978ರಲ್ಲಿ ಮುಖ್ಯಮಂತ್ರಿಯಾಗಿದ್ದ ಆರ್.ಗುಂಡೂರಾವ್ ಅವರು ಎಸ್.ಆರ್.ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ನೀಡುವಂತೆ ಸೂಚಿಸಿದರು. 1980ರಲ್ಲಿ ವರದಿ ನೀಡಿದ ಸಮಿತಿ ಯೋಜನೆಯನ್ನು ಜಾರಿಗೊಳಿಸಬಹುದು ಎಂದು ಸರ್ಕಾರಕ್ಕೆ ಶಿಫಾರಸು ಮಾಡಿತು. ಕರ್ನಾಟಕ ಸರ್ಕಾರ 1988ರಲ್ಲಿ ಯೋಜನೆಗೆ ಒಪ್ಪಿಗೆ ನೀಡಿತು. ಆದರೆ, ಗೋವಾ ಸರ್ಕಾರದಿಂದ ಇದಕ್ಕೆ ವಿರೋಧ ವ್ಯಕ್ತವಾಯಿತು. ಈ ವೇಳೆ ಎಸ್.ಆರ್.ಬೊಮ್ಮಾಯಿ ಅವರು 1989ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಅಂದಿನ ಗೋವಾ ಮುಖ್ಯಮಂತ್ರಿ ಪ್ರತಾಪ್ ಸಿಂಗ್ ರಾಣಾ ಜೊತೆ ಮಾತುಕತೆ ನಡೆಸಿದರು. ಮಾತುಕತೆ ಫಲಪ್ರದವಾಗಿ ಯೋಜನೆಗೆ ಗೋವಾ ಒಪ್ಪಿಗೆ ನೀಡಿತು. 2000ದಲ್ಲಿ ಕಳಸಾ-ಬಂಡೂರಿ ನಾಲೆ ಯೋಜನೆಗೆ ಅರಣ್ಯ ಇಲಾಖೆಯೂ ಅನುಮತಿ ನೀಡಿತು. ಬಂಡೂರಿ ನಾಲಾ ಯೋಜನೆಗೆ 49.20 ಕೋಟಿ ರೂ. ಕಳಸಾ ನಾಲಾ ಯೋಜನೆಗೆ 44.78 ಕೋಟಿ ರೂ. ವೆಚ್ಚ ಮಾಡಲು ಆಡಳಿತಾತ್ಮಕ ಒಪ್ಪಿಗೆ ಸಿಕ್ಕಿತು.

2002ರ ಏ.30ರಂದು ಕಳಸಾ ಬಂಡೂರಿ ಕಾಲುವೆ ಮೂಲಕ ನೀರನ್ನು ಹರಿಸಲು ಕೇಂದ್ರ ಸರ್ಕಾರದ ಜಲಸಂಪನ್ಮೂಲ ಸಚಿವಾಲಯವೂ ಒಪ್ಪಿಗೆ ನೀಡಿತು. ಆದರೆ 2002ರ ಮೇನಲ್ಲಿ ಗೋವಾ ಸರ್ಕಾರ ಯೋಜನೆ ಬಗ್ಗೆ ತಕರಾರು ಎತ್ತಿದ ಪರಿಣಾಮ ಈ ಯೋಜನೆ ಈಗ ಅರ್ಧದಲ್ಲೇ ನಿಂತಿದೆ.

ಕಾಮಗಾರಿಗೆ ತಡೆ ನೀಡುತ್ತಿರುವ ಗೋವಾದ ವಾದವೇನು?:
ಮೊದಲನೆಯದಾಗಿ ಮಹದಾಯಿ ನೀರಿನ ಕೊರತೆಯನ್ನು ಅನುಭವಿಸುತ್ತಿರುವ ಒಂದು ಕಣಿವೆ ಪ್ರದೇಶ. ಹೀಗಾಗಿ ಈ ಕಣಿವೆಯಲ್ಲಿ ಹರಿಯುವ ನೀರನ್ನು ವರ್ಗಾಯಿಸಬಾರದು. ಎರಡನೇಯದಾಗಿ ಮಹದಾಯಿ ನದಿಯನ್ನು ತಿರುವು ಮಾಡಿದರೆ ಪಶ್ಚಿಮ ಘಟ್ಟದ ಪರಿಸರದ ಮೇಲೆ ಪರಿಣಾಮ ಬೀರುತ್ತದೆ. ಮೂರನೇಯದಾಗಿ ಈ ನೀರಿನಲ್ಲಿ ವಾಸ ಮಾಡುತ್ತಿರುವ ಸಿಗಡಿ ಮೀನು ನಮಗೆ ಅಮೂಲ್ಯವಾಗಿದೆ. ಸಿಹಿ ನೀರಿನಲ್ಲಿ ಮಾತ್ರ ಬದುಕಬಲ್ಲ ಈ ಮೀನು ಗೋವಾಕ್ಕೆ ಬರುವ ಪ್ರವಾಸಿಗರಿಗೆ ಅಚ್ಚುಮೆಚ್ಚು. ಒಂದು ವೇಳೆ ನೀರಿನ ಸಮಸ್ಯೆಯಾಗಿ ಮೀನು ಉತ್ಪಾದನೆ ಕಡಿಮೆಯಾದರೆ ಪ್ರವಾಸೋದ್ಯಮದ ಮೇಲೆ ನೇರ ಹೊಡೆತ ಬೀಳುತ್ತದೆ. ಹೀಗಾಗಿ ಮಹಾದಾಯಿ ನದಿಯ ನೀರು ತನ್ನ ರಾಜ್ಯದ ಮೂಲಕವೇ ಹಾದು ಹೋಗಬೇಕೆಂಬ ವಾದವನ್ನು ಮುಂದಿಟ್ಟುಕೊಂಡು ಬಂದಿದೆ.

Comments